ಉಪ್ಪಿನಕುದ್ರು : ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಮತ್ತು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ ಉಪ್ಪಿನಕುದ್ರು ಇವರ ಜಂಟಿ ಆಶ್ರಯದಲ್ಲಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಸಮಾರಂಭವನ್ನು ದಿನಾಂಕ 19 ಜನವರಿ 2025ರಂದು ಅಪರಾಹ್ನ 2-00 ಗಂಟೆಗೆ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಇದರ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ. ಎಂ.ಎಲ್. ಸಾಮಗ ಇವರು ಉದ್ಘಾಟನೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಬಹುಮುಖ ಪ್ರತಿಭೆ ಶ್ರೀ ಓಂ ಗಣೇಶ್ ಉಪ್ಪುಂದ ಇವರಿಗೆ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2025’ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ವಿದ್ಯಾರ್ಥಿಗಳಿಂದ ಗೊಂಬೆಯಾಟ ಪ್ರಾತ್ಯಕ್ಷಿಕೆ ಹಾಗೂ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.