ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಗೆ ದತ್ತಿ ದಾನಿಗಳ ಆಶಯದಂತೆ ಮಂಡ್ಯ ಜಿಲ್ಲೆಯ ಒಬ್ಬರು ಜನಪದ ಕಲಾವಿದರು ಸೇರಿದಂತೆ ರಾಜ್ಯದಲ್ಲಿ ಜಾನಪದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಒಟ್ಟು ಮೂರು ಜನಪದ ಸಾಧಕರನ್ನು ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿʼ ಪ್ರಶಸ್ತಿಯನ್ನು ಮಂಡ್ಯ ಜಿಲ್ಲೆಯ ಹಿರಿಯ ಸಮಾಜಸೇವಕರಾದ ಶ್ರೀ ಎಸ್.ಎಮ್. ಶಂಕರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದು. ಪ್ರತಿ ವರ್ಷ ಜನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಗುರುತಿಸಿ ಗೌರವಿಸಲಾಗುತ್ತದೆ. 2023ನೇ ಸಾಲಿನ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಯನ್ನು ಮಂಡ್ಯ ಜಿಲ್ಲೆ ನಾಗಮಂಗಲದ ಡಿ.ವಿ.ರುದ್ರೇಶ್, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಕದರಮ್ಮ ಹಾಗೂ ಮದ್ದೂರು ತಾಲೂಕಿನ ಸಿ.ಎನ್. ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಾನಪದ ಕಲಾವಿದರಿಗಾಗಿಯೇ ಮೀಸಲಾಗಿರುವ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಯನ್ನು ಜನಪದ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗಾಗಿ ಮೀಸಲಿಟ್ಟು, ಜನಪದ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತ ಉತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಗಳನ್ನು ಕೊಡಲಾಗುತ್ತದೆ. ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷತೆ ವಹಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಸ್ತುತ ದತ್ತಿ ಪ್ರಶಸ್ತಿಗಳು ಜಾನಪದ ಕ್ಷೇತ್ರಕ್ಕೆ ಮೀಸಲಿದ್ದು ಗ್ರಾಮಾಂತರ ಭಾಗದಲ್ಲಿ ತಮ್ಮ ನಿತ್ಯ ಬದುಕಿನಲ್ಲಿ ಸದ್ದಿಲ್ಲದೆ ಜನಪದ ಕಲೆಯನ್ನು ವಿಸ್ತರಿಸುತ್ತಿರುವ ಸಾಧಕರನ್ನು ಗುರುತಿಸಿ ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ದಿನಾಂಕ 29-11-2023ರ ಬುಧವಾರ ಬೆಳಗ್ಗೆ 10.30ಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಕೆ.ಪಿ.ಎಸ್. ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಂಡ್ಯ ಜಿಲ್ಲಾ ಕಾರ್ಯದರ್ಶಿಗಳಾದ ಡಾ.ಕೃಷ್ಣೇಗೌಡ ಹುಸ್ಕೂರ, ಶ್ರೀ, ಬಿ.ಎಂ. ರಮೇಶ್ಗೌಡ, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾದ ಶ್ರೀ . ಬಿ.ಎಂ. ಅಪ್ಪಾಜಪ್ಪ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಮತ್ತು ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.