ಕೊಡಗಿನ ರಾಮಸ್ವಾಮಿ ಕಣಿವೆಯ ಕೆ.ಎಸ್.ಭಗವಾನ್ ಮತ್ತು ಬಿ.ನೇತ್ರಾವತಿ ದಂಪತಿಗಳ ಪುತ್ರಿಯಾಗಿರುವ ಪೂರ್ಣಿಮಾ ಭಗವಾನ್ ಇವರು ಕಣಿವೆ ಸೂರ್ಯನಾರಾಯಣ ಶೆಟ್ಟಿಯವರ ಹಿರಿಯ ಮೊಮ್ಮಗಳು. ಮೈಸೂರಿನ ಚಂದ್ರಿಕಾ ಪಾಠಶಾಲೆಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಡೆದು ಮಹಾರಾಣಿ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ತಮ್ಮ ಎಮ್ಎಸ್‌ಸಿ ಸ್ನಾತಕೋತ್ತರ ಪದವಿಯನ್ನು ಪಡೆದರು . ಹೊಳೆನರಸೀಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು. ನಂತರ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ. ಎಳವೆಯಿಂದಲೇ ಓದು ,ಬರೆಹ, ಅಂಚೆ ಚೀಟಿ ಸಂಗ್ರಹದಂತಹ ಹವ್ಯಾಸವನ್ನು ಬೆಳೆಸಿಕೊಂಡವರು. ನಾಟಕ , ನೃತ್ಯ, ಸಂಗೀತ ಕಾರ್ಯಕ್ರಮಗಳತ್ತ ತಮ್ಮ ಒಲವು ಹರಿಸಿಕೊಂಡಿದ್ದಾರೆ. ಶಾಲಾ ದಿನಗಳಲ್ಲಿ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳಿಗೆ ಭಾಜನರಾಗಿದ್ದಾರೆ.ಇವರ ಕವನ,ಲೇಖನಗಳು ಈ ಸಂಜೆ ಮತ್ತು ನಿಮ್ಮ ವೈಶ್ಯವಾರ್ತೆ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಎಂ. ಎಸ್ಸಿ. ಪದವೀಧರರಾದರೂ ಕನ್ನಡ ಪುಸ್ತಕಗಳ ಓದು ಮತ್ತು ಬರೆಯುವ ಹವ್ಯಾಸವನ್ನು ಚಿಕ್ಕಂದಿನಿಂದಲೂ ರೂಢಿಸಿಕೊಂಡು ಬಂದಿರುವುದರಿಂದ ಅಂತರ್ಜಾಲದ ಅನೇಕ ವಾಟ್ಸ್ಅಪ್ ಬಳಗಗಳಲ್ಲಿ ಕನ್ನಡ ಕವಿತೆಗಳು, ಚಿತ್ರಕವನ, ಚುಟುಕು, ವಚನ, ಲೇಖನ, ಕಿರುಗತೆ ಇತ್ಯಾದಿಗಳನ್ನು ಬರೆದು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹಳಷ್ಟು ಸ್ಪರ್ಧೆಗಳಲ್ಲಿ ಅತ್ಯುತ್ತಮ ಸ್ಥಾನ ಗಳಿಸಿದ್ದಾರೆ.
ಕನ್ನಡ ಸಾರಸ್ವತ ಲೋಕಕ್ಕೆ ಇವರು ಸಂಚಲನ – ಸಂವಹನ ಮತ್ತು ಸಂವಹನ – ಸಂವರ್ಧನ ಎಂಬ ಎರಡು ಸ್ವರಚಿತ ಕವನ ಸಂಕಲನಗಳನ್ನು ಕಥಾಬಿಂದು ಪ್ರಕಾಶನದ ಸಹಾಯದೊಂದಿಗೆ ಲೋಕಾರ್ಪಣೆ ಮಾಡಿದ್ದಾರೆ. “ನಮ್ಮ ಓದು ವೃತ್ತಿ ಯಾವುದೇ ಆಗಿರಲಿ. ದೈನಂದಿನ ಜೀವನದಲ್ಲಿ ಶ್ರೀಮಂತವಾದ ಕನ್ನಡ ಭಾಷೆಯನ್ನು ಬಳಸಿ. ನಾಡು, ನುಡಿ, ದೇಶದ ಬಗ್ಗೆ ಅಭಿಮಾನ, ಗೌರವ ಇರಲಿ. ಕನ್ನಡ ಪುಸ್ತಕಗಳನ್ನು ಕೊಂಡು ಓದಿ ವಿಶ್ಲೇಷಿಸುವ ಹವ್ಯಾಸ ಬೆಳೆಸಿಕೊಳ್ಳಿ” ಎಂದು ಇಂದಿನ ಕಾವ್ಯಾಸಕ್ತರಿಗೆ ಕಿವಿಮಾತು ಹೇಳುತ್ತಾರೆ. ಕಲಿಕೆಗೆ ಕೊನೆಯಿಲ್ಲ ಎಂಬ ಮಾತಿನಂತೆ ತಮ್ಮ ನಿವೃತ್ತಿಯ ನಂತರವೂ ಸಂಸ್ಕೃತದ ಅಧ್ಯಯನದಲ್ಲಿ ತೊಡಗಿಕೊಂಡು ಹಲವು ಪರೀಕ್ಷೆಗಳಲ್ಲಿ ಉತ್ತೀರ್ಣಳಾಗಿದ್ದಾರೆ. ಇವರ ವಿವಾಹಿತ ಪುತ್ರಿ ವಿದೇಶದಲ್ಲಿ ನೆಲೆಸಿದ್ದಾರೆ. ಇವರು ಬೆಂಗಳೂರಿನಲ್ಲಿ ನಿವೃತ್ತ ಜೀವನ ಸಾಗಿಸುತ್ತಿದ್ದಾರೆ. ಇವರ ಮುಂದಿನ ಬರೆಹಗಳು ಇನ್ನಷ್ಟು ಪ್ರಜ್ವಲಿಸಿ ನಿವೃತ್ತ ಜೀವನವು ಸುಖಮಯವಾಗಿ ಸಾಗಲೆಂದು ಹಾರೈಸೋಣ.
ವೈಲೇಶ್ ಪಿ.ಎಸ್. ಕೊಡಗು (8861405738 ದೂರವಾಣಿ)
ಶ್ರೀ ವೈಲೇಶ್ ಪಿ. ಎಸ್. ಇವರು ಶಿವೈ ವೈಲೇಶ್ ಪಿ.ಎಸ್. ಕೊಡಗು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡುತ್ತಾರೆ. ಸಾಹಿತ್ಯ ರಚನೆ ಮತ್ತು ಸಂಘಟನೆ ಇವರ ಪ್ರವೃತ್ತಿಯಾಗಿದೆ. ಮನೆ ಮನೆ ಕಾವ್ಯಗೋಷ್ಠಿ ಸಂವರ್ಧಕ ಪರಿಷತ್ತು, ಛಂದೋಬದ್ಧ ಕಾವ್ಯ ಸಂವರ್ಧಕ ಪರಿಷತ್ತು ಮತ್ತು ಸಾಹಿತ್ಯ ಸಂವರ್ಧಕ ಪರಿಷತ್ತು ಈ ಮೂರು ಬಳಗದ ವತಿಯಿಂದ ಅನೇಕ ಯುವ ಕವಿಗಳನ್ನು ಸಾಹಿತ್ಯ ಲೋಕಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಒಳಗೊಂಡಂತೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಕೊಡಗು ಜಿಲ್ಲೆಯ ಜಾನಪದ ಪರಿಷತ್ತಿನ ವತಿಯಿಂದ ನಡೆದ 2019ರ ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿಯೂ ಸನ್ಮಾನಿಸಲಾಗಿದೆ. ‘ಅಮ್ಮ ನಿಮಗಾಗಿ’ ಮತ್ತು ‘ಕಣ್ಮರೆಯಾದ ಹಳ್ಳಿ’ ಇವು ಕವನ ಸಂಕಲನಗಳು, ‘ಬೊಮ್ಮಲಿಂಗನ ಸಗ್ಗ’ ಮುಕ್ತಕಗಳು, ‘ಮನದ ಇನಿದನಿ’ ಲೇಖನ ಮಾಲೆಗಳ ಕೃತಿ ಮತ್ತು ‘ಕೊಡಗಿನ ಸಾಹಿತ್ಯ ತಪಸ್ವಿಗಳು’ ಎಂಬ ಕೊಡಗಿನ ಸಾಹಿತಿಗಳ ಪರಿಚಯ ಮಾಲಿಕೆ ಭಾಗ-1. ಇವು ಇವರ ಪ್ರಕಟಿತ ಕೃತಿಗಳು. ಇನ್ನೂ ಹತ್ತು ಕೃತಿಗಳನ್ನು ತಯಾರಿಸಲು ಬೇಕಾದಷ್ಟು ಬರಹಗಳು ಶೇಖರವಾಗಿವೆ. ಕೊಡಗು ಜಿಲ್ಲೆ ಮತ್ತು ಕರ್ನಾಟಕ ರಾಜ್ಯದ ಹಲವಾರು ಕಡೆಗಳಲ್ಲಿ ಹಾಗೂ ಕೇರಳದ ಕಾಸರಗೋಡಿನ ಒಟ್ಟು ಇನ್ನೂರಕ್ಕೂ ಹೆಚ್ಚಿನ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ಗುಲ್ಬರ್ಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಿದ್ದಾರೆ.
ಇತ್ತೀಚೆಗೆ ಹಲವಾರು ಛಂದೋಬದ್ಧ ಪ್ರಕಾರಗಳಲ್ಲಿ ಕಾವ್ಯ ರಚನೆ ಮಾಡುತ್ತಿರುವ ಇವರು ಮುಕ್ತಕಗಳು, ಗಝಲ್, ನವ್ಯ ವಚನ ಸಾಹಿತ್ಯ, ನವ್ಯ ಕವಿತೆಗಳನ್ನೂ ರಚಿಸಿದ್ದಾರೆ. ಲಲಿತ ಪ್ರಬಂಧಗಳು, ವೈಚಾರಿಕ ಲೇಖನಗಳು, ಕೊಡಗಿನ ಕವಿ ಸಾಹಿತಿಗಳ ಪರಿಚಯ, ಹಾಯ್ಕು, ಟಂಕಾ, ರುಬಾಯಿ, ದೇಶ ಭಕ್ತಿ ಗೀತೆಗಳು, ಭಕ್ತಿ ಗೀತೆಗಳು, ಲಾವಣಿಗಳು, ಜಾನಪದ ಶೈಲಿಯ ಗೀತೆಗಳನ್ನು ಇತ್ಯಾದಿ ಇವರ ರಚನೆಗಳು. ಶಕ್ತಿ ಪತ್ರಿಕೆಯಲ್ಲಿ ಅಂಕಣ ಬರಹಗಾರರಾಗಿದ್ದಾರೆ. ಇವರು ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ, ಮುಕ್ತಕ ಸಾಹಿತ್ಯ ಸಿಂಧು ಪ್ರಶಸ್ತಿ, ಸಾಹಿತ್ಯ ರತ್ನ ಹೀಗೆ ಇನ್ನೂ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಮತ್ತು ಇತ್ತೀಚೆಗೆ ಕೃಷ್ಣರಾಜನಗರದ ಕಪ್ಪಡಿ ಕ್ಷೇತ್ರದಲ್ಲಿ ಸನ್ಮಾನವನ್ನು ಸ್ವೀಕರಿಸಿದ್ದಾರೆ.