ಬೆಂಗಳೂರು : ಕರ್ನಾಟಕ ಜಾನಪದ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಪ್ರೊ. ಹಿ. ಚಿ. ಬೋರಲಿಂಗಯ್ಯ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಪ್ರೊ. ಹಿ.ಶಿ. ರಾಮಚಂದ್ರೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ಶ್ರೀಯುತರನ್ನು ಆಯ್ಕೆ ಮಾಡಲಾಗಿದೆ.
ದಿನಾಂಕ 15-07-2024ರ ಸೋಮವಾರ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಹಿ.ಚಿ. ಬೋರಲಿಂಗಯ್ಯ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಪ್ರೊ. ಹಿ. ಚಿ. ಬೋರಲಿಂಗಯ್ಯ :
ಲೇಖಕ, ಪ್ರಾಧ್ಯಾಪಕ, ಕುಲಸಚಿವ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಇವರು 25-10-1955ರಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹಿತ್ತಲಪುರ ಗ್ರಾಮದಲ್ಲಿ ಜನಿಸಿದರು.
ಹಿತ್ತಲಪುರ ಹಾಗೂ ಉಜ್ಜನಿಗಳಲ್ಲಿ ತನ್ನ ಪ್ರಾಥಮಿಕ ಶಿಕ್ಷಣವನ್ನು ನಡೆಸಿದ ಇವರು ತಮ್ಮ ಪ್ರೌಢಶಿಕ್ಷಣವನ್ನು ಹುಲಿಯೂರುದುರ್ಗದಲ್ಲಿ ಪೂರ್ತಿಗೊಳಿಸಿದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮುಂದುವರೆಸಿ 1981ರಲ್ಲಿ ಜಿ.ಪಿ.ರಾಜರತ್ನಂ ಚಿನ್ನದ ಪದಕದೊಂದಿಗೆ ಕನ್ನಡವಿಷಯದಲ್ಲಿ ಎಂ.ಎ. ಪದವಿ ಪಡೆದರು. ‘ವಿಸ್ಮೃತಿ ಮತ್ತು ಸಂಸ್ಕೃತಿ: ಒಂದು ಬುಡಕಟ್ಟಿನ ಲೋಕದೃಷ್ಟಿ ಹಿನ್ನೆಲೆಯಲ್ಲಿ ಸಂಸ್ಕೃತಿ ಚರ್ಚೆ’ ಎಂಬ ಸಂಪ್ರಬಂಧಕ್ಕಾಗಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದಿಂದ ಪಿ. ಎಚ್. ಡಿ. ಪದವಿ ಪಡೆದರು.
ಇವರು ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಹಾಗೂ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್ ಆಗಿ, ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಮತ್ತು ಲಲಿತ ಕಲಾ ವಿಭಾಗ ಹಾಗೂ ಕುವೆಂಪು ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ, ಡಾ. ರಾಮಮನೋಹರ ಲೋಹಿಯಾ ಅಧ್ಯಯನ ಪೀಠದ ಸಂಚಾಲಕರಾಗಿ ಹಾಗೂ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.