ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಹಾಗೂ ಜನ ಸಾಮಾನ್ಯರಿಗೆ ಕನ್ನಡ ಸಾಹಿತ್ಯ ಪರಿಷತ್ತನ್ನು ತಲುಪಿಸಲು ನಾಡೋಜ ಡಾ. ಮಹೇಶ ಜೋಶಿಯವರು ಅಧ್ಯಕ್ಷರಾದ ನಂತರ ಅನೇಕ ವಿಶಿಷ್ಟ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಇದವರೆಗೂ ಎರಡು ಸಾವಿರಕ್ಕೂ ಹೆಚ್ಚು ಮಹತ್ವದ ಪ್ರಕಟಣೆಗಳನ್ನು ಪ್ರಕಟಿಸಿದ್ದು, ಅದನ್ನು ಜನ ಸಾಮಾನ್ಯರಿಗೆ ಮುಟ್ಟಿಸುವ ದೃಷ್ಟಿಯಿಂದ ವರ್ಷದಲ್ಲಿ ನಾಲ್ಕು ಸಂದರ್ಭದಲ್ಲಿ ರಿಯಾಯತಿ ದರದಲ್ಲಿ ಪುಸ್ತಕ ಮಾರಾಟ ಮಾಡುವ ಯೋಜನೆಯನ್ನು ರೂಪಿಸಿದ್ದಾರೆ.
ಅದರಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಿಡೀ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆಗಳ ಮೇಲೆ ಶೇ 10ರಿಂದ ಶೇ 75ರವರೆಗೆ ರಿಯಾಯತಿ ನೀಡಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ ವಿಭಾಗವು ಶನಿವಾರ, ಭಾನುವಾರಗಳೂ ಸೇರಿದಂತೆ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 7-00 ಗಂಟೆಯವರೆಗೂ ತೆರೆದಿರುತ್ತದೆ. ಈ ಸೌಲಭ್ಯದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ನಾಡೋಜ ಡಾ. ಮಹೇಶ ಜೋಶಿಯವರು ಸಮಸ್ತ ಕನ್ನಡಿಗರನ್ನೂ ವಿನಂತಿಸಿಕೊಂಡಿದ್ದಾರೆ.