ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 16 ಫೆಬ್ರವರಿ 2025ರಂದು ಸಂಜೆ 4-00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 2024ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಾನ್ಯ ಶಾಸಕರಾದ ಶ್ರೀ ಯಶ್ ಪಾಲ್ ಎ. ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಸಚಿವರಾದ ಶಿವರಾಜ ಎಸ್. ತಂಗಡಗಿ ಇವರು ಪ್ರಶಸ್ತಿ ಪ್ರದಾನ ಹಾಗೂ ಕಿರು ಪರಿಚಯ ಪುಸ್ತಕ ಬಿಡುಗಡೆ ಮಾಡಲಿದ್ದು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ ಶೆಟ್ಟಿ ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಬಡಗುತಿಟ್ಟು ಯಕ್ಷಗಾನ ಪ್ರದರ್ಶನದಲ್ಲಿ ಶ್ರೀ ವಿದ್ಯಾಧರ ವೆಂಕಟೇಶ ಮಡಿವಾಳ ಜಲವಳ್ಳಿ ಮತ್ತು ಬಳಗದವರಿಂದ ‘ಮಾಗದ ವಧೆ’ ಎಂಬ ಪ್ರಸಂಗ, ಬಳಿಕ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನದಲ್ಲಿ ಶ್ರೀಮತಿ ಪೂರ್ಣಿಮಾ ಯತೀಶ್ ರೈ ಮತ್ತು ಬಳಗದವರಿಂದ ‘ಮಹಿಷ ಮರ್ದಿನಿ’ ಎಂಬ ಪ್ರಸಂಗ ಪ್ರದರ್ಶನಗೊಳ್ಳಲಿದೆ.