ಮಡಿಕೇರಿ : ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿ ಇದರ ವತಿಯಿಂದ ಕಾಲೇಜು ಸಭಾಂಗಣದಲ್ಲಿ ‘ಕಲೋತ್ಸವ -2025’ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮವು ದಿನಾಂಕ 27 ಏಪ್ರಿಲ್ 2025ರಂದು ನಡೆಯಿತು.
ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎನ್. ಪೊನ್ನಣ್ಣ “ಆಧುನಿಕ ಯುಗದಲ್ಲಿ ಪ್ರತಿ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಇದ್ದು, ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆರೋಗ್ಯಯುತವಾಗಿ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಕಾಲೇಜು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದೊಂದಿಗೆ ಕಲೆ, ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ ಸರ್ವಾಂಗೀಣ ವ್ಯಕ್ತಿತ್ವ ವಿಕಶನಕ್ಕೆ ಎಲ್ಲರೂ ಶ್ರಮಪಡಬೇಕು. ಪ್ರತಿಯೊಬ್ಬರಲ್ಲಿಯೂ ಸಹ ಒಂದಲ್ಲ ಒಂದು ರೀತಿ ಪ್ರತಿಭೆ ಇದ್ದು, ಅದನ್ನು ಸರಿಯಾಗಿ ಬಳಸಿಕೊಂಡು ಗೆಲುವು ಸಾಧಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿ ಜೀವನವು ಅತ್ಯಮೂಲ್ಯವಾಗಿದ್ದು, ಭವಿಷ್ಯದಲ್ಲಿ ಸ್ಮರಿಸುವಂತಹ ಬದುಕನ್ನು ಕಟ್ಟಿಕೊಳ್ಳಬೇಕು. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆ ಹೊಂದಬೇಕು. ಈ ನಿಟ್ಟಿನಲ್ಲಿ ಇಂತಹ ಕಲೋತ್ಸವ ಕಾರ್ಯಕ್ರಮಗಳು ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅಡಗಿರುವ ವಿಶೇಷ ಹಾಗೂ ವಿಶಿಷ್ಟವಾದ ಕಲೆಯನ್ನು ಹೊರ ತರುವಲ್ಲಿ ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟೇಶ್ ಪ್ರಸನ್ನ, ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿ.ಡಿ.ಸಿ. ಸದಸ್ಯರಾದ ಅಂಬೆಕಲ್ ನವೀನ್, ಪ್ರಾಧ್ಯಾಪಕರಾದ ಡಾ. ನಿರ್ಮಲ, ಕಾವೇರಿ ಪ್ರಕಾಶ್, ಚೈತ್ರ, ಅನುಪಮ ಇತರರು ಉಪಸ್ಥಿತರಿದ್ದರು. ಕಲೋತ್ಸವ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸ್ಪರ್ಧಾ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು.