ಮೈಸೂರು : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಮೈಸೂರು ಇದರ ವತಿಯಿಂದ ದಿನಾಂಕ 08 ಜೂನ್ 2025ರಂದು ಬೆಳಗ್ಗೆ 9-30 ಗಂಟೆಗೆ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ ಮೈಸೂರು ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ಹಾಗೂ ಖ್ಯಾತ ವೈದ್ಯರಾದ ಡಾ. ಸಿ. ಶರತ್ ಕುಮಾರ್ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ವಿಶೇಷ ಉಪನ್ಯಾಸ, ಕವಿಗೋಷ್ಠಿ, ವಿಚಾರಗೋಷ್ಠಿ, ದತ್ತಿ ಪ್ರಶಸ್ತಿ ಮತ್ತು ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಈ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ಇವರ ಅಧ್ಯಕ್ಷತೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ಇವರು ಉದ್ಘಾಟನೆ ಮಾಡಲಿದ್ದಾರೆ. ಹಡವನಹಳ್ಳಿ ವೀರಣ್ಣ ಗೌಡರ ‘ಉರಿವ ದೀಪದ ಕೆಳಗೆ’ ಕಥಾ ಸಂಕಲನವನ್ನು ಪ್ರಸಿದ್ಧ ಹಿರಿಯ ವಿದ್ವಾಂಸರಾದ ಡಾ. ಗುರುಪಾದ ಮಾರಿಗುದ್ದಿ ಇವರು ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಸುರೇಶ ಕೋರಕೊಪ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರಗೋಷ್ಠಿಯಲ್ಲಿ ‘ಸಮ್ಮೇಳನಾಧ್ಯಕ್ಷರ ಬದುಕು ಬರಹ’ ಎಂಬ ವಿಷಯದ ಬಗ್ಗೆ ಹಿರಿಯ ಸಾಹಿತಿ ಎಂ.ಬಿ. ಜಯಶಂಕರ್ ಮತ್ತು ‘ಮೈಸೂರಿನ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಂಪರೆ’ ಎಂಬ ವಿಷಯದ ಬಗ್ಗೆ ಕನ್ನಡ ಪ್ರಾಧ್ಯಾಪಕರಾದ ಡಾ. ಬಿ.ಕೆ. ಕೆಂಪೇಗೌಡ ಇವರು ವಿಷಯ ಮಂಡನೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಮಹಮ್ಮದ್ ಮುನಾಫ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ.