ಸೋಮವಾರಪೇಟೆ : ರಾಷ್ಟ್ರಕವಿ ಕುವೆಂಪು ಪ್ರತಿಮೆ ನಿರ್ಮಾಣ ಸಮಿತಿ, ಸೋಮವಾರಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಸೋಮವಾರಪೇಟೆ ಸಾಹಿತ್ಯ ಪರಿಷತ್ತು ಕಚೇರಿ ಬಳಿ ದಿನಾಂಕ 23 ಅಕ್ಟೋಬರ್ 2025ರಂದು ರಾಷ್ಟ್ರಕವಿ ಕುವೆಂಪು ಪುತ್ಥಳಿ ಅನಾವರಣಗೊಂಡಿತು.
ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ “ರಾಷ್ಟ್ರಕವಿ ಕುವೆಂಪು ಕನ್ನಡ ಮಣ್ಣಿನ ಅಮೂಲ್ಯ ರತ್ನ. ಕುವೆಂಪು ಈ ನಾಡಿನ ಘನತೆಯನ್ನು ಹೆಚ್ಚಿಸಿದ ಮಹಾನ್ ವ್ಯಕ್ತಿ, ಜ್ಞಾನಪೀಠ ಪ್ರಶಸ್ತಿ ತಂದುಕೊಡುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿದವರು. ಇಂತಹ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಿರುವುದು ಶ್ಲಾಘನೀಯ” ಎಂದರು.

ಮಾಜಿ ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, “ಕನ್ನಡ ನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ಪುಣ್ಯವಂತರು. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನಂತರ ಬೇರೆ ಭಾಷೆಗಳಿಗೆ. ಕುವೆಂಪು ಅವರು ರಾಷ್ಟ್ರಕವಿಯಾಗಿ ಕನ್ನಡವನ್ನ ದೇಶ ವಿದೇಶಗಳಲ್ಲಿ ಪಸರಿಸಿದ್ದಾರೆ” ಎಂದರು.
ಮಾಜಿ ಸಚಿವ ಬಿ.ಎ. ಜೀವಿಜಯ, ತಹಶೀಲ್ದಾರ್ ಕೃಷ್ಣಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಪ್ರತಿಮೆ ನಿರ್ಮಾಣ ಸಮಿತಿ ಅಧ್ಯಕ್ಷ ಜೆ.ಸಿ. ಶೇಖರ್, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಖಜಾಂಚಿ ಮನುದೇವ್ ದೇವಾಂಗಿ, ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಜೇತ್, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್ಹ. ಮುತ್ತಣ್ಣ ಹಾಗೂ ಮುಂತಾದವರು ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
