ಮಂಗಳೂರು : 118ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಅಮೃತ ಪ್ರಕಾಶ ಪತ್ರಿಕೆ ಹಾಗೂ ಬಲ್ಮಠದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಜಂಟಿ ಆಶ್ರಯದಲ್ಲಿ ದಿನಾಂಕ 06 ಏಪ್ರಿಲ್ 2026ರಂದು ಬಲ್ಮಠದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು.

ಈ ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣ ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳದ ಎಸ್.ವಿ.ಎಸ್. ಟೆಂಪಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಇವರು ಮಾತನಾಡಿ “ವಿದ್ಯಾರ್ಥಿಗಳು ಸಾಹಿತ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿದರೆ ಮುಂದಿನ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ. ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ. ಮೊಬೈಲನ್ನು ಮಿತವಾಗಿ ಬಳಸಿ. ಓರ್ವ ಮಹಿಳೆ ಶಿಕ್ಷಣ ಪಡೆದರೆ ಇಡೀ ಕುಟುಂಬ, ಇಡೀ ಸಮಾಜವನ್ನು ವಿದ್ಯಾವಂತರನ್ನಾಗಿ ಮಾಡುತ್ತಾರೆ. ಆದ್ದರಿಂದ ಕಲಿತ ವಿದ್ಯೆಗೆ ಕೊನೆ ಇಲ್ಲ ವಿದ್ಯೆ, ಸಾಹಿತ್ಯ ನಮ್ಮನ್ನು ಸಂತೋಷದಲ್ಲಿ ಇರುವಂತೆ ಮಾಡುತ್ತದೆ” ಎಂದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಶಾರದಾ ಪಿ.ಯು. ಕಾಲೇಜಿನ ಉಪ ಪ್ರಾಂಶುಪಾಲರಾದ ಅರುಣ ಕುಮಾರಿ ಕೆ. ಹಾಗೂ ವಿಜಯ ಕರ್ನಾಟಕ ದೈನಿಕ ಪತ್ರಿಕೆಯ ಪ್ರಧಾನ ವರದಿಗಾರರಾದ ಮುಹಮ್ಮದ್ ಆರಿಫ್ ಪಡುಬಿದ್ರೆ ಉಪಸ್ಥಿತರಿದ್ದು ಶುಭ ಹಾರೈಸಿದರು. ನಿವೃತ್ತ ಶಿಕ್ಷಕಿ, ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಎಲ್ಲರನ್ನೂ ಸ್ವಾಗತಿಸಿ, ಕನ್ನಡ ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು.

