ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ, ಯಕ್ಷಗುರುಕುಲ ಶಿಕ್ಷಣ ಟ್ರಸ್ಟ್ (ರಿ.), ಇದರ 53ನೇ ವಾರ್ಷಿಕೋತ್ಸವ ಸಮಾರಂಭವನ್ನು ಶಿವಪ್ರಭಾ ಶ್ರೀ ವಾದಿರಾಜವನಂ ಹಯಗ್ರೀವ ನಗರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ 25 ಜನವರಿ 2026ರಂದು ಮಧ್ಯಾಹ್ನ 3-00 ಗಂಟೆಗೆ ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಇವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಹೆ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಮತ್ತು ಟೆಲಿಕಮ್ಯುನಿಕೇಶನ್ಸ್ ನಿವೃತ್ತ ಇಂಜಿನಿಯರ್ ವೈ ಸೀತಾರಾಮ ಶೆಟ್ಟಿ ಇವರು ಉಪಸ್ಥಿತರಿರುವರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದು, ಇದೇ ಸಂದರ್ಭದಲ್ಲಿ ಯಕ್ಷಗಾನ ಪ್ರಸಿದ್ಧ ವೇಷಧಾರಿ ಶ್ರೀ ಚಂದ್ರಗೌಡ ಗೋಳಿಕೆರೆ ಇವರಿಗೆ ‘ಯಕ್ಷರಂಗದ ಭೀಷ್ಮ ಎಂ.ಎಂ. ಹೆಗ್ಡೆ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಹಿಮ್ಮೇಳ ಪ್ರತಿಭೆ ಹಾಗೂ ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ ಹಾಗೂ ಕೇಂದ್ರದ ವಿದ್ಯಾರ್ಥಿಗಳಿಂದ ‘ಸಮರ ಸೌಗಂಧಿಕ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

