ಮಡಿಕೇರಿ : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಸಂಯುಕ್ತಾಶ್ರಯದಲ್ಲಿ ನಡೆದ ಸುವರ್ಣ ಕರ್ನಾಟಕ- 50ರ ಸಂಭ್ರಮದ ನಿಮಿತ್ತ ಪ್ರಾಥಮಿಕ ಶಾಲಾ ಕನ್ನಡ ಮಾಧ್ಯಮ ಶಿಕ್ಷಕರಿಗೆ ಭಾಷಣ ಸ್ಪರ್ಧೆಯನ್ನು ದಿನಾಂಕ 25-02-2024ರಂದು ಏರ್ಪಡಿಸಲಾಗಿತ್ತು.
ಲೇಖಕರ ಮತ್ತು ಕಲಾವಿದರ ಬಳಗದ ವತಿಯಿಂದ ನಡೆದ ವಾರ್ಷಿಕ ಕಾರ್ಯಕ್ರಮದಲ್ಲಿ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಐಗೂರು ಸರಕಾರಿ ಪ್ರೌಢಶಾಲೆಯ ಕು. ಬೇಸಿಲ್ ಸಿ.ಬಿ. ಇವರಿಗೆ ಟಿ.ಪಿ. ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಕಲೆ ಮತ್ತು ಸಾಹಿತ್ಯ ಬೆಳವಣಿಗೆ ಕುರಿತು ಮುಖ್ಯ ಭಾಷಣ ಮಾಡಿದ ಸಾಹಿತಿ ಡಾ. ಜೆ. ಸೋಮಣ್ಣ “ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಸಾಹಿತಿ ಭಾರತೀಸುತ ಅವರು ತಮ್ಮ ಕಥೆ, ಕವನ, ಕಾದಂಬರಿ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಮಕ್ಕಳಲ್ಲಿ ಪ್ರಾಥಮಿಕ ಶಾಲೆಯಿಂದಲೇ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯದ ಅಭಿರುಚಿ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗಿಸಲು ಶಿಕ್ಷಕರು ಪ್ರೇರೇಪಿಸಬೇಕು. ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಉತ್ತಮ ಕೊಡುಗೆ ನೀಡುತ್ತಾ ಬಂದಿರುವ ಜಿಲ್ಲಾ ಕ.ಸಾ.ಪ.ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಉದಯೋನ್ಮುಖ ಬರಹಗಾರರು, ಕವಿಗಳು ಹಾಗೂ ಸಾಹಿತಿಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಜಿಲ್ಲೆಯಲ್ಲಿ ಸಾಹಿತ್ಯ ಚಟುವಟಿಕೆಗಳು ಹಾಗೂ ಬರಹಗಾರರ ಸಂಖ್ಯೆ ವೃದ್ಧಿಸಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಟಿ.ಪಿ. ರಮೇಶ್ ಮಾತನಾಡಿ “ಇಂದಿನ ಜಾಗತಿಕ ಯುಗದಲ್ಲಿ ಆಂಗ್ಲ ಮಾಧ್ಯಮದ ಪೈಪೋಟಿ ನಡುವೆ ಕನ್ನಡ ಶಾಲೆಯ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ ಈ ದತ್ತಿ ಸ್ಥಾಪಿಸಲಾಗಿದೆ. ವಿದ್ಯಾರ್ಥಿ ಬೆಸಿಲ್ ನಂತಹ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಇಂತಹ ಮಕ್ಕಳು ಕೂಡ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಅವಕಾಶ ಕಲ್ಪಿಸಲು ಸಾಧ್ಯ” ಎಂದು ಹೇಳಿದರು.
ಕಾರ್ಯಕ್ರಮದ ನಿಮಿತ್ತ ‘ಕಲೆ ಮತ್ತು ಸಾಹಿತ್ಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ’ ಕುರಿತು ಪ್ರಾಥಮಿಕ ಶಾಲಾ ಕನ್ನಡ ಮಾಧ್ಯಮದ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಕೊಡ್ಲಿಪೇಟೆಯ ಕೂಡ್ಲೂರು ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಸ್ನೇಹ ಬಸಮ್ಮ, ಪೊನ್ನಂಪೇಟೆ ಬಳಿಯ ನಡಿಕೇರಿ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೊಪುಡ ಸೌಮ್ಯ ಚಿಣ್ಣಪ್ಪ, ನಾಪೋಕ್ಲು ಬಳಿಯ ಚರಿಯಪರಂಬು ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಟಿ.ಎಚ್. ಸುಕುಮಾರ್ ತೊರೆನೂರು ಕ್ರಮವಾಗಿ ಮೊದಲ ಮೂರು ಸ್ಥಾನ ಗಳಿಸಿ ಬಹುಮಾನ ಪಡೆದರು. ಉಪನ್ಯಾಸಕಿ ಕೆ. ಜಯಲಕ್ಷ್ಮಿ, ಶ್ವೇತಾ ರವೀಂದ್ರ ಮತ್ತು ಸಾಹಿತಿ ಈರವಂಡ ಹರಿಣಿ ವಿಜಯ್ ತೀರ್ಪುಗಾರರಾಗಿ ಭಾಗವಹಿಸಿದ್ದರು.