ಮಂಗಳೂರು : ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಿನಾಂಕ 14 ಮಾರ್ಚ್ 2026ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರ ವಿತರಣೆ ಸಮಾರಂಭ ನಡೆಯಿತು.
ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಗೌರವ ಪ್ರಶಸ್ತಿ ಪ್ರದಾನ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ “ಭಾಷಾ ಪರಂಪರೆಯನ್ನು ರಕ್ಷಿಸುವಲ್ಲಿ ಮತ್ತು ಅದನ್ನು ಭವಿಷ್ಯದ ಪೀಳಿಗೆಗೆ ರವಾನಿಸುವ ನಿಟ್ಟಿನಲ್ಲಿ ಭಾಷಾ ಅಕಾಡೆಮಿಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಈ ಹಿನ್ನೆಲೆಯಲ್ಲಿ ಅಕಾಡೆಮಿಯ ಕಾರ್ಯ ಚಟುವಟಿಕೆಗಳಿಗೆ ಸರ್ಕಾರ ಸದಾ ಪ್ರೋತ್ಸಾಹ ನೀಡಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಚಟುವಟಿಕೆಗಳನ್ನು ಬೆಂಬಲಿಸಲು, ಅರೆಭಾಷೆ ಮತ್ತು ಅದರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.
ಸಾಧಕರಾದ ಸಂಶೋಧನೆ ಮತ್ತು ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಪುತ್ತೂರು ಅನಂತರಾಜ ಗೌಡ, ಅರೆಭಾಷಿಕರ ಸಂಘಟನೆ ಮತ್ತು ಸಾಮಾಜ ಸೇವೆಗಾಗಿ ಲೋಕೇಶ್ವರಿ ವಿನಯಚಂದ್ರ, ಅರೆಭಾಷೆ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಕಟ್ರತನ ಲಲಿತಾ ಅಯ್ಯಣ್ಣ ಇವರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿ ಪ್ರಶಸ್ತಿಯು 50 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಂಸಾ ಪತ್ರವನ್ನು ಒಳಗೊಂಡಿದೆ. ಇದೇ ಸಂದರ್ಭದಲ್ಲಿ ಅಕಾಡೆಮಿ ವತಿಯಿಂದ ಒಟ್ಟು ಹನ್ನೊಂದು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ “ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ ಕ್ಷೇತ್ರಗಳನ್ನು ಜೋಡಿಸಿಕೊಂಡು ಭಾಷೆಗಳ ರಕ್ಷಣೆಗೆ ಯುವ ಸಮೂಹ ಕಟಿಬದ್ಧರಾಗಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಇವರು ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶಾಲೆಟ್ ಲವೀನಾ ಪಿಂಟೊ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಅಕಾಡೆಮಿಯ ಮಾಜಿ ಸದಸ್ಯ ಲೋಕಯ್ಯ ಗೌಡ ಕೆ., ಮಂಗಳೂರು ತಾಲೂಕು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷರಾದ ಸೌಮ್ಯ ಸುಕುಮಾರ್, ಮಂಗಳೂರು ಯುವ ಘಟಕದ ಅಧ್ಯಕ್ಷ ಕಿರಣ್ ಬುಡ್ಡೆಗುತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ರಾಜೇಶ್ ಜಿ., ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಸುಳ್ಯದ ಲಯನ್ಸ್ ಮಾಜಿ ಗವರ್ನರ್ ಎಂ.ಬಿ. ಸದಾಶಿವ ಅವರು ಅಭಿನಂದನಾ ಭಾಷಣ ಮಾಡಿದರು. ಚಂದ್ರಶೇಖರ್ ಪೇರಾಲು ಸ್ವಾಗತಿಸಿದರು.
