ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾದ ‘ಚಾವುಂಡರಾಯ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭವು 28-06-2024ರ ಶುಕ್ರವಾರ ಸಂಜೆ ಘಂಟೆ 5.00ರಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನವನ್ನು ಚಾಮರಾಜನಗರ ಜಿಲ್ಲೆಯ ಕನಕಗಿರಿ ಕ್ಷೇತ್ರದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮಿಗಳು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನ್ ಸೊಸೈಟಿ(ರಿ.) ಉಜಿರೆ ಇಲ್ಲಿನ ಶ್ರೀ ಧರ್ಮಸ್ಥಳ ಸುರೇಂದ್ರ ಕುಮಾರ್ ಅವರು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, 2023ನೆಯ ಸಾಲಿನ ಪ್ರಶಸ್ತಿ ಪುರಸ್ಕೃತರಾದ ಡಾ. ಪ್ರೀತಿ ಶುಭಚಂದ್ರ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಶ್ರವಣಬೆಳಗೊಳ ಶ್ರೀಮಠದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ವಿಂದ್ಯಗಿರಿಯಲ್ಲಿ ಬಾಹುಬಲಿ ಏಕಶಿಲಾ ಮೂರ್ತಿಯನ್ನು ಸ್ಥಾಪಿಸಿದ್ದ ಚಾವುಂಡರಾಯನ ಹೆಸರಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದು, ಪ್ರಾಚೀನ ಜೈನ ಸಾಹಿತ್ಯವನ್ನು ಆಧರಿಸಿ ಆಧುನಿಕ ಕನ್ನಡದಲ್ಲಿ ಕೃತಿ ರಚನೆ ಮಾಡಿರುವ ಲೇಖಕರನ್ನು, ಪ್ರಾಚೀನ ಜೈನಗ್ರಂಥಗಳ ಸಂಪಾದನೆ ಮಾಡಿರುವವರನ್ನು, ಜೈನ ಪರಿಚಾರಿಕೆ, ಪೋಷಣೆ ಹೀಗೆ ಜೈನ ಸಾಹಿತ್ಯಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ ಮಹನೀಯರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. 2023ನೆಯ ಸಾಲಿನಲ್ಲಿ ಈ ಪುರಸ್ಕಾರಕ್ಕೆ ಪಾತ್ರರಾಗಿರುವ ಡಾ. ಪ್ರೀತಿ ಶುಭಚಂದ್ರ ಅವರು ಹಿರಿಯ ಲೇಖಕಿ ಮತ್ತು ಖ್ಯಾತ ವಿಮರ್ಶಕಿ.
ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಇವರು ಕಾವ್ಯಮೀಮಾಂಸೆ ಮತ್ತು ಸ್ತ್ರೀವಾದದ ಬಗ್ಗೆ ವಿಶೇಷವಾದ ಅಧ್ಯಯನವನ್ನು ನಡೆಸಿದ್ದಾರೆ. ಜೈನ ಸಾಹಿತ್ಯದ ಅಧ್ಯಯನಕ್ಕೆ ಹೊಸ ಅಯಾಮ ನೀಡಿದ ಇವರ ಸಂಶೋಧನೆಗಳನ್ನು ಗುರುತಿಸಿ ಈ ಪುರಸ್ಕಾರವನ್ನು ನೀಡಲಾಗುತ್ತಿದೆ.