ಮಂಗಳೂರು : ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳೂರು ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಹಾಗೂ ಲಲಿತಕಲಾ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸಂಬಂಧಿಸಿದ ಭಾವಗೀತೆಗಳ ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆಯು ದಿನಾಂಕ 18 ಸೆಪ್ಟೆಂಬರ್ 2024ರಂದು ನಡೆಯಿತು.
ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾದ ಪ್ರೊ. ರಾಮೇಗೌಡ ಎಂ. ಇವರು ಸ್ಪರ್ಧೆಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಇವರು ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ದೇವಿ ಪ್ರಸಾದ್ ಹಾಗೂ ಲಲಿತಕಲಾ ಸಂಘದ ಹಾಗೂ ಸ್ಪರ್ಧೆಗಳ ಸಂಯೋಜಕ ಡಾ. ಕೃಷ್ಣಪ್ರಭ ಉಪಸ್ಥಿತರಿದ್ದರು. ಐಕ್ಯೂಎಸಿ ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯ ಕಾರ್ಯಕ್ರಮವನ್ನು ನಿರೂಪಿಸಿದರು. ಜಯಲಕ್ಷ್ಮೀ ಹಾಗೂ ಸಂಧ್ಯಾರಾಣಿ ಅವರು ತೀರ್ಪುಗಾರರಾಗಿ ಸಹಕರಿಸಿದರು.
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪ್ರಥಮ, ಮಂಗಳೂರಿನ ಬೆಸಂಟ್ ಮಹಿಳಾ ಕಾಲೇಜು ದ್ವಿತೀಯ ಮತ್ತು ಕೆನರಾ ಕಾಲೇಜು ತೃತೀಯ ಸ್ಥಾನ ಪಡೆಯಿತು. ಈ ಸ್ಪರ್ಧೆಯಲ್ಲಿ ಜಿಲ್ಲೆಯ 16 ಕಾಲೇಜಿನ ತಂಡಗಳು ಭಾಗವಹಿಸಿದ್ದವು.