ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಂಯುಕ್ತ ಆಶ್ರಯದಲ್ಲಿ 2024-25 ಸಾಲಿನ ದಿ. ಡಾ. ಇರುವೈಲು ರಘುರಾಮ ಅಸ್ರಣ್ಣ ಮತ್ತು ಶ್ರೀಮತಿ ಲೀಲಾ ಅಸ್ರಣ್ಣ ನೆನಪಿನ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಮತ್ತು ಕೊಡಗು ಜಿಲ್ಲೆಯ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 20 ಜನವರಿ 2025 ಸೋಮವಾರ ಬೆಳಗ್ಗೆ 10-00 ಗಂಟೆಗೆ ಭಾಗಮಂಡಲ ಹೋಬಳಿಯ ಕೋರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುನೀಲ್ ಪತ್ರಾವೋ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಂಗಾಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕರಾದ ಚೀಯಕ ಪೂವಂಡ ಚಂಗಪ್ಪ ನೆರವೇರಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್, ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಶ್ವೇತನ್ ಚಂಗಪ್ಪ, ದತ್ತಿದಾನಿಗಳಾದ ವಿರಾಜಪೇಟೆಯ ಡಾ. ಇ.ರ. ದುರ್ಗಾ ಪ್ರಸಾದ್, ಭಾಗಮಂಡಲ ಹೋಬಳಿ ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷರಾದ ಎ.ಎಸ್. ಶ್ರೀಧರ್ ಇವರುಗಳು ಭಾಗವಹಿಸಲಿದ್ದಾರೆ. ದತ್ತಿದಾನಿಗಳ ಆಶಯದಂತೆ ‘ಕೊಡಗಿನ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ’ ವಿಷಯಗಳ ಕುರಿತು ಉಪನ್ಯಾಸವನ್ನು ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ. ದಿವಾಕರ ನೀಡಲಿದ್ದಾರೆ. ಕೊಡಗು ಜಿಲ್ಲೆಯ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಾದಾಪುರದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಅದವಿಯಾ ಯು. ಇವರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನಿರ್ ಅಹಮದ್ ತಿಳಿಸಿದ್ದಾರೆ.