ಬೆಂಗಳೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ ಫ.ಗು.ಹಳಕಟ್ಟಿಯವರ 145ನೆಯ ಜನ್ಮದಿನೋತ್ಸವದ ಕಾರ್ಯಕ್ರಮ ದಿನಾಂಕ 02 ಜೂನ್ 2025 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ.ಡಾ.ಮಹೇಶ ಜೋಶಿ ಮಾತನಾಡಿ “ವಚನ ಸಾಹಿತ್ಯದ ವಿರಾಟ್ ಸ್ವರೂಪವನ್ನು ತೋರಿಸಿ ಕೊಟ್ಟ ಫ.ಗು.ಹಳಕಟ್ಟಿಯವರು ಸಹಜವಾಗಿಯೇ ವಚನಪಿತಾಮಹ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಳಕಟ್ಟಿಯವರು ತಾಳೆಯೋಲೆಗಳನ್ನು ಸಂಗ್ರಹಿಸುವುದಕ್ಕೆ ಮೊದಲು ಕವಿ ಚರಿತೆಕಾರರು ಗುರುತಿಸಿದ್ದು ಕೇವಲ 50 ವಚನಕಾರರನ್ನು ಮಾತ್ರ. ಫ. ಗು. ಹಳಕಟ್ಟಿಯವರು ತಮ್ಮ ಸಂಶೋಧನೆಯ ಮೂಲಕ 250ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು. ಜೊತೆಗೆ ಹರಿಹರನ 42 ರಗಳೆಗಳನ್ನು ಸಂಶೋಧಿಸಿ ಪ್ರಕಟಿಸಿದ ಸಾಧನೆ ಹಳಕಟ್ಟಿಯವರಿಗೆ ಸಲ್ಲುತ್ತದೆ. ಹಳಕಟ್ಟಿಯವರು ಬಸವಣ್ಣನವರ ವಚನಗಳನ್ನು ಇಂಗ್ಲಿಷ್ ಗೆ ಅನುವಾದಿಸಿ ‘ಇಂಡಿಯನ್ ಆಂಟಿಕ್ವರಿ’ಯಲ್ಲಿ ಪ್ರಕಟಗೊಳಿಸಿದರು. ಅಷ್ಟೇ ಅಲ್ಲ ವಚನಗಳ ಗಾಯನಕ್ಕೂ ವ್ಯವಸ್ಥೆ ಮಾಡಿಸಿದರಲ್ಲದೆ ಶ್ರೇಷ್ಠ ಸಂಗೀತಕಾರರನ್ನು ವಚನ ಗಾಯನ ರೆಕಾರ್ಡಿಂಗ್ ಗಾಗಿ ಮುಂಬಯಿಯವರೆಗೆ ಕಳುಹಿಸಿದರು. ಹೀಗೆ ವಚನ ಸಾಹಿತ್ಯದ ಪ್ರಸಾರ ಕಾರ್ಯವನ್ನು ಅವರು ಬಹುಮುಖಿಯಾಗಿ ಕೈಗೊಂಡರು. 1926ರಲ್ಲಿ ಬಳ್ಳಾರಿಯಲ್ಲಿ ನಡೆದ 12ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, 1928ರಲ್ಲಿ ಜರುಗಿದ 3ನೇ ಕರ್ನಾಟಕ ಏಕೀಕರಣ ಪರಿಷತ್ತಿನ ಅಧ್ಯಕ್ಷತೆ ಹೀಗೆ ಹಲವು ಗೌರವಗಳಿಗೆ ಅವರು ಪಾತ್ರರಾಗಿದ್ದರು” ಎಂದು ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಬಿ. ಎಂ. ಪಟೇಲ್ ಪಾಂಡು ಸೇರಿದಂತೆ ಪರಿಷತ್ತಿನ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.