ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ನಗರದ ಕ.ಸಾ.ಪ. ಕಛೇರಿಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-05-2024ರಂದು ನಡೆಯಿತು.
ಈ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಇವರು ಮಾತನಾಡಿ “ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೀಗ 110ನೆಯ ವರ್ಷದ ಸಂಭ್ರಮ. ಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಗಾಗಿ 1915ರಲ್ಲಿ ಆಗಿನ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸಂಸ್ಥಾಪನೆಗೊಳ್ಳಲು ಪ್ರಮುಖ ಕಾರಣರಾಗಿದ್ದರು. ಆಗಿನಿಂದ ಇಂದಿನವರೆಗೂ ಹಲವು ಮಹನೀಯರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿ ಕನ್ನಡ ನಾಡು, ನುಡಿ ಬೆಳವಣಿಗೆಗೆ ನೆರವಾಗಿದ್ದಾರೆ. ಕನ್ನಡ ನಾಡಿನಲ್ಲಿ ಕೈಗಾರಿಕೆ, ವಿದ್ಯೆ, ಕೃಷಿಗೆ ಆದ್ಯತೆ ನೀಡಿದ್ದ ಅವರು, ಮೈಸೂರು ಸಂಸ್ಥಾನದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂದು ಭದ್ರಾವತಿಯ ಕಾಗದದ ಕಾರ್ಖಾನೆ, ಶಿವನಸಮುದ್ರ ಜಲ ವಿದ್ಯುತ್ ಘಟಕ ಸ್ಥಾಪಿಸಿದರು. ರಾಜ್ಯದಲ್ಲಿ ಒಂದು ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕೆಂಬ ಆಶಯದ ಫಲವಾಗಿ ಮೈಸೂರು ವಿಶ್ವವಿದ್ಯಾಲಯ ಆರಂಭ ಮಾಡಿದರು. ದಿ. ಡಿ.ಜೆ. ಪದ್ಮನಾಭ ಅವರ ನೇತೃತ್ವದಲ್ಲಿ ಕೊಡಗಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಸ್ತಿತ್ವಕ್ಕೆ ಬಂದು 54 ವರ್ಷಗಳು ಸಂದಿವೆ. ಅಂದಿನಿಂದ ಜಿಲ್ಲೆಯಲ್ಲಿ ಪರಿಷತ್ತಿನ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳು, ತಾಲೂಕು, ಜಿಲ್ಲಾ ಸಮ್ಮೇಳನಗಳು ಸೇರಿದಂತೆ ಜಿಲ್ಲೆಯಲ್ಲಿ ಈ ತನಕ ಮೂರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಜಿಲ್ಲೆಯಲ್ಲಿ ವಿದ್ಯಾರ್ಥಿ ಸಮುದಾಯ ಹಾಗೂ ಯುವ ಜನಾಂಗದಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸುವಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅವಿರತವಾಗಿ ಶ್ರಮಿಸುತ್ತಿದೆ” ಎಂದು ಹೇಳಿದರು.
ಮುಖ್ಯ ಭಾಷಣ ಮಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, “ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕತಿ, ಪರಂಪರೆಯನ್ನು ರಕ್ಷಿಸಲು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ 1915ರಂದು ಕನಾಟಕ ಸಾಹಿತ್ಯ ಪರಿಷತ್ ಸ್ಥಾಪನೆಯಾಗಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾದುದು. ಒಡೆಯರ್ ಅವರ ಪ್ರಯತ್ನಕ್ಕೆ ಅಂದಿನ ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್ ಅವರ ಕಾರ್ಯ ಕೂಡ ಗಣನೀಯವಾದುದು. ಕನ್ನಡ ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ಘನತೆ ಇದ್ದು, ಅದನ್ನು ಎತ್ತಿ ಹಿಡಿಯುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಕೊಡಗಿನಲ್ಲಿ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಪ್ರಗತಿಪಥದಲ್ಲಿ ಸಾಗುತ್ತಿರುವುದು ಹೆಮ್ಮೆಯ ಸಂಗತಿ” ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆ.ಆರ್. ನಗರ ತಾಲೂಕಿನ ಡೋರನಹಳ್ಳಿ ಸಂತ ಅಂತೋಣಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ವಿಲ್ಫ್ರೆಡ್ ಕ್ರಾಸ್ತಾ ಅವರು ಮಾತನಾಡಿ “ಕನ್ನಡ ನಾಡಿಗೆ ಒಡೆಯರ್ ಅವರ ಕೊಡುಗೆ ಅಪಾರವಾದುದು. ಕನ್ನಡಿಗರಾದ ನಾವೆಲ್ಲರೂ ಜತೆಗೂಡಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸಬೇಕು” ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಎಸ್.ಐ. ಮುನಿರ್ ಅಹ್ಮದ್, “ಕನ್ನಡ ನಾಡಿನ ಸಾಹಿತ್ಯ ದಿಗ್ಗಜರು ನಾಡು-ನುಡಿ, ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸಿದ್ದಾರೆ. ನಾವೆಲ್ಲರೂ ಜತೆಗೂಡಿ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ” ಎಂದರು.
ಭಾರತ್ ಸ್ಕೌಟ್ಸ್ ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಜಿಲ್ಲಾ ಲೇಖಕರು ಮತ್ತು ಕಲಾವಿದರ ಸಂಘದ ಅಧ್ಯಕ್ಷ ಲೋಕನಾಥ್ ಅಮೆಚೂರ್, ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷೆ ಕಡ್ಲೇರ ತುಳಸಿ ಇವರೆಲ್ಲಾ ಮಾತನಾಡಿದರು. ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ರೇವತಿ ರಮೇಶ್, ಪದಾಧಿಕಾರಿಗಳಾದ ಎಂ.ಎನ್. ವೆಂಕಟನಾಯಕ್, ಎಚ್.ಎಸ್. ಪ್ರೇಮಕುಮಾರ್, ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ ಶ್ವೇತ ರವೀಂದ್ರ, ತಾಲೂಕು ಕ.ಸಾ.ಪ. ನಿಕಟ ಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್, ಕಾರ್ಯದರ್ಶಿ ಬಾಳೆಯಡ ದಿವ್ಯ, ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕೃತರಾದ ಕಟ್ರತನ ಲಲಿತಾ ಅಯ್ಯಣ್ಣ, ಕ.ಸಾ.ಪ. ಪರಿಷತ್ತಿನ ಸದಸ್ಯರಾದ ಕೆ.ಯು. ರಂಜಿತ್, ಕೆ.ವಿ. ಉಮೇಶ್, ಚೊಕ್ಕಾಡಿ ಪ್ರೇಮ ರಾಘವಯ್ಯ, ದಂಬೆಕೋಡಿ ನಿಖಿಲ್, ಅಬ್ದುಲ್ಲಾ, ಜಯಮ್ಮ, ಸೌಮ್ಯ, ಕಛೇರಿ ವ್ಯವಸ್ಥಾಪಕಿ ರೇಣುಕ ಮತ್ತಿತರರು ಉಪಸ್ಥಿತರಿದ್ದರು. ಅಧ್ಯಾಪಕ ಮೆ.ನಾ. ವೆಂಕಟನಾಯಕ್ ನಿರ್ವಹಿಸಿ, ಸದಸ್ಯರಾದ ಪ್ರೇಮ ರಾಘವಯ್ಯ, ಸೌಮ್ಯ ಕನ್ನಡ ಗೀತೆ ಹಾಡಿದರು.