ಬೆಂಗಳೂರು: ಮಂಡ್ಯದಲ್ಲಿ 20,21 ಮತ್ತು 22 ಡಿಸಂಬರ್ 2024 ರಂದು ಅಯೋಜನೆಗೊಂಡಿರುವ 87ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ‘ಕನ್ನಡ ರಥ’ ಕನ್ನಡದ ನಾಡದೇವತೆಯಾದ ‘ಶ್ರೀ ಭುವನೇಶ್ವರಿಯ ದೇವಿ ದೇವಾಲಯ’ವಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೋಕಿನ ಭುವನಗಿರಿಯಿಂದ ಪ್ರಾರಂಭವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನು ಸಂಚರಿಸಿ ದಿನಾಂಕ 27 ನವೆಂಬರ್ 2024ರಂದು ಬೆಂಗಳೂರಿನಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಗೆ ಬಂದಿತ್ತು.\
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ, ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ಗೌರವ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿ ಮತ್ತು ಅಪಾರ ಸಂಖ್ಯೆ ಕನ್ನಡಿಗರು ಕನ್ನಡ ರಥಕ್ಕೆ ಸ್ವಾಗತವನ್ನು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ “ಕನ್ನಡ ರಥ ಸಂಚರಿಸಿದಲ್ಲೆಲ್ಲ ಕನ್ನಡಿಗರು ಅಪಾರ ಸಂಖ್ಯೆಯಲ್ಲಿ ನೆರೆದು ಸ್ವಾಗತವನ್ನು ಕೋರಿದ್ದಾರೆ. ಇದು ಕನ್ನಡಿಗರಲ್ಲಿ ಸ್ವಾಭಿಮಾನವನ್ನು ತುಂಬುವ ಮತ್ತು ಮಂಡ್ಯದಲ್ಲಿ ಅಯೋಜಿತವಾಗಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಆಸಕ್ತಿಯನ್ನು ಮೂಡಿಸುವಲ್ಲಿ ಅತ್ಯಂತ ಯಶಸ್ವಿಯಾಗಿದೆ 87ನೆಯ ಅಖಿಲ ಭಾರತ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯುವುದು ಎನ್ನುವುದಕ್ಕೆ ಇದು ಅತ್ಯುತ್ತಮ ನಿದರ್ಶನವಾಗಿದೆ.” ಎಂದು ಹೇಳಿದರು.