ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಸಂವಾದ ಕಾರ್ಯಕ್ರಮವನ್ನು ದಿನಾಂಕ 18-05-2024ರಂದು ಎಳನೀರು ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು.
ಈ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಬಿ.ಎ. ಕುಮಾರ ಹೆಗ್ಡೆ “ಸಾಹಿತ್ಯ, ಸಂಗೀತ ಮತ್ತು ಕಲೆಗಳಲ್ಲಿ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾಹಿತ್ಯವು ನಮ್ಮ ಬದುಕನ್ನು ಶ್ರೀಮಂತಗೊಳಿಸುತ್ತದೆ. ಎಲ್ಲರೂ ಓದುವ ಸಂಸ್ಕೃತಿಯನ್ನು ಬೆಳೆಸಿಕೊಂಡಾಗ ಸಾತ್ವಿಕ ಪರಿಸರ ಉಂಟಾಗುತ್ತದೆ” ಎಂದು ಹೇಳಿದರು.
ಮೂಡುಬಿದಿರೆ ಜೈನ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಉಪನ್ಯಾಸ ನೀಡಿ “ಸಾಹಿತ್ಯಕ್ಕಾಗಿ ಬದುಕನ್ನು ಸಮರ್ಪಿಸಿಕೊಂಡವರ ನೆನಪು ಸದಾ ಶಾಶ್ವತವಾಗಿರುತ್ತದೆ. ಸಾಹಿತ್ಯಕ್ಕೆ ಬದುಕನ್ನು ಹಗುರಗೊಳಿಸುವ ಸಾಮರ್ಥ್ಯವಿದೆ. ಕನ್ನಡ ಸಾಹಿತ್ಯದ ಜಾನಪದ, ಹಳೆಗನ್ನಡ, ನಡುಗನ್ನಡ, ಹೊಸಗನ್ನಡದ ಸಾಹಿತ್ಯ ಪ್ರಕಾರಗಳು ಕಾಲಕಾಲಕ್ಕೆ ಬದುಕಿನ ಶ್ರೀಮಂತಿಕೆಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿವೆ” ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಮಾತನಾಡಿ, “ಸಾಹಿತ್ಯದ ಪರಿಣಾಮ ಎಲ್ಲೆಡೆ ಪಸರಿಸಿ ಎಲ್ಲರನ್ನೂ ತಲುಪಬೇಕು ಎಂಬ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ” ಎಂದರು.
ಮಂಗಳೂರಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮಾಧವ ಎಂ.ಕೆ., ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಎಸ್.ಡಿ.ಎಂ. ಕಾಲೇಜಿನ ಕನ್ನಡ ಉಪನ್ಯಾಸಕ ದಿವಾ ಕೊಕ್ಕಡ ಭಾಗವಹಿಸಿದ್ದರು. ಸಾಹಿತಿ ಪ್ರೇಮ ಕುಮಾರ್, ಸಮಾಜಸೇವಕ ಕೇಶವ ಫಡ್ಕೆ ಅವರನ್ನು ಗೌರವಿಸಲಾಯಿತು. ಮಲವಂತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಜೈನ್ ಸ್ವಾಗತಿಸಿ, ಎಸ್.ಡಿ.ಎಂ. ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ವಂದಿಸಿ, ಅರ್ಚಿತ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.