ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮವು ದಿನಾಂಕ 20-04-2024ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಈ ವರ್ಷದ ಪ್ರಶಸ್ತಿಯನ್ನು ಪ್ರಸಿದ್ಧ ಗಮಕ ವ್ಯಾಖ್ಯಾನಕಾರ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಆರ್.ಆರ್.ಸಿ.ಯ ಆಡಳಿತಾಧಿಕಾರಿ ಡಾ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.
ನಾಡೋಜ ಪ್ರೊ. ಕೆ.ಪಿ. ರಾವ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಅಧ್ಯಕ್ಷ ಡಾ. ನಾ. ದಾಮೋದರ ಶೆಟ್ಟಿ ವಹಿಸಲಿದ್ದಾರೆ. ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಶಿವಕುಮಾರ ಅಳಗೋಡು ಅಭಿನಂದನಾ ಭಾಷಣ ಮಾಡಲಿರುವರು. ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಮನೋರಮಾ ಎಂ. ಭಟ್ ಹಾಗೂ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಶ್ರೀ ಮುಳಿಯ ಗೋಪಾಲಕೃಷ್ಣ ಭಟ್ಟರು ಬರೆದ ‘ಚಾಣಕ್ಯ ತಂತ್ರ’ ಎಂಬ ಕೃತಿ ಬಿಡುಗಡೆಗೊಳ್ಳಲಿದೆ.