ಬೆಂಗಳೂರು : 2024ನೇ ಕನ್ನಡ ಸಾಹಿತ್ಯ ಪರಿಷತ್ತಿನ ‘ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ’ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿರುವ ‘ಉದಯ ಕಾಲ’ ಪತ್ರಿಕೆಯ ಸಂಪಾದಕರಾದ ಕೆ.ಎನ್. ಪುಟ್ಟಲಿಂಗಯ್ಯ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯು ದತ್ತಿಯ ನಿಯಮಗಳನ್ನು ಪರಿಶೀಲಿಸಿ ಈ ಆಯ್ಕೆಯನ್ನು ಮಾಡಿದೆ.
ಪ್ರಶಸ್ತಿ ಪುರಸ್ಕೃತರಾದ ಕೆ.ಎನ್. ಪುಟ್ಟಲಿಂಗಯ್ಯ ಗೌಡರು ಮೈಸೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೊತ್ತರ ಪದವಿಯನ್ನು ಪಡೆದುಕೊಂಡಿದ್ದು, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ, ಉದಯ ಟಿ.ವಿ, ಟೈಮ್ಸ್ ಆಫ್ ಇಂಡಿಯಾ (ಕನ್ನಡ) ಸೇರಿದಂತೆ ಕಾಲು ಶತಮಾನಕ್ಕೂ ಹೆಚ್ಚು ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದು, ಪತ್ರಿಕೋದ್ಯಮದ ಉನ್ನತ ಆಶಯಗಳನ್ನು ಸದಾ ಎತ್ತಿ ಹಿಡಿಯುತ್ತಾ ಬಂದಿದ್ದಾರೆ. ಪ್ರಸ್ತುತ ‘ಉದಯಕಾಲ’ ಪತ್ರಿಕೆಯ ಸಂಪಾದಕ ಮತ್ತು ಪ್ರಕಾಶಕರಾಗಿ ನಿರ್ಭೀತ ಪತ್ರಿಕೋದ್ಯಮವನ್ನು ನಡೆಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಜನಿಸಿದ ದತ್ತಿ ದಾನಿಗಳಾದ ಕಿಟ್ಟಪ್ಪ ಗೌಡರು ಪ್ರೌಢಶಾಲೆಯಲ್ಲಿ ಓದುವಾಗಲೇ ‘ಭಾರತ ಬಿಟ್ಟು ತೊಲಗಿ’ ಚಳುವಳಿಯಲ್ಲಿ ಭಾಗವಹಿಸಿದ್ದವರು. ನಂತರವೂ ಸದಾ ಜನಪರ ಚಳುವಳಿಗಳಲ್ಲಿ ತೊಡಗಿಸಿಕೊಂಡವರು. ಮುಖ್ಯ ಶಿಕ್ಷಕರಾಗಿ, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸದಸ್ಯರಾಗಿ, ಮೈಸೂರು ವಿಶ್ವವಿದ್ಯಾಲಯದ ಅಕಾಡಮಿಕ ಕೌನ್ಸಿಲ್ ಸದಸ್ಯರಾಗಿ ಕೆಲಸ ಮಾಡಿದವರು. ಇವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿರ್ಭೀತ ಪತ್ರಕರ್ತರಿಗೆ ನೀಡಲೆಂದು ದತ್ತಿಯನ್ನು ಸ್ಥಾಪಿಸಿದ್ದಾರೆ. ಯಾವ ಆಮಿಷಕ್ಕೂ ಒಳಗಾಗದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಮಾಜದ ನ್ಯೂನತೆಗಳನ್ನು ಎತ್ತಿ ಹಿಡಿದು ತೋರಿಸುವ ವ್ಯಕ್ತಿಗಳಿಗೆ ಈ ಪ್ರಶಸ್ತಿ ಸಲ್ಲಬೇಕು ಎನ್ನುವುದು ದತ್ತಿ ದಾನಿಗಳ ಆಶಯವಾಗಿದೆ.
ದತ್ತಿ ಪ್ರಶಸ್ತಿ ಪುರಸ್ಕೃತರಾದ ಕೆ.ಎನ್. ಪುಟ್ಟಲಿಂಗಯ್ಯ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಅಭಿನಂದಿಸಿ ಪತ್ರಿಕೋದ್ಯಮದ ಹಾದಿಗೆ ಶುಭವನ್ನು ಕೋರುತ್ತದೆ.