ಪುತ್ತೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ‘ಯಕ್ಷಗಾನ ಪ್ರಸಂಗ: ಸ್ವರೂಪ, ವಿಕಾಸ ಮತ್ತು ಅನನ್ಯತೆ’ ಎಂಬ ವಿಷಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣವು ದಿನಾಂಕ 31 ಜನವರಿ 2025ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆಯಲಿದೆ.
ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರೊ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರು ವಿ. ವಿ. ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಪ್ರಾಸ್ತಾವಿಕ ಭಾಷಣ ಮಾಡುವರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಷ್ಣುಗಣಪತಿ ಭಟ್ ಉಪಸ್ಥಿತರಿರುವರು.
ಬಳಿಕ ನಡೆಯುವ ಉಪನ್ಯಾಸ ಕಾರ್ಯಕ್ರಮದಲ್ಲಿ ಯಕ್ಷಗಾನ ಅಕಾಡಮಿಯ ಮಾಜಿ ಅಧ್ಯಕ್ಷರಾದ ಪ್ರೊ. ಎಂ. ಎಲ್. ಸಾಮಗ ‘ಯಕ್ಷಗಾನ ಪ್ರಸಂಗಗಳ ಸ್ವರೂಪ ಮತ್ತು ಕಾವ್ಯಾಂಶ’ ಎಂಬ ವಿಷಯದಲ್ಲಿ ಹಾಗೂ ಯಕ್ಷಗಾನ ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣು ಭಟ್, ‘ಯಕ್ಷಗಾನ ಪ್ರಸಂಗ ಸಾಹಿತ್ಯ ಬೆಳೆದು ಬಂದ ಬಗೆ’ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ. ಕುರಿಯ ವಿಠಲಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ್ ಭಟ್ ಇವರು ‘ಯಕ್ಷಗಾನ ಪ್ರಸಂಗಗಳ ಅರ್ಥ ವಿಸ್ತರಣೆ’ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ.
ಅಪರಾಹ್ನ ಘಂಟೆ 2.00ರಿಂದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಂದ ಯಕ್ಷ-ಗಾನ ವೈಭವ’ ಕಾರ್ಯಕ್ರಮ ನಡೆಯಲಿದೆ.