ಮಂಗಳೂರು: ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆದ ಅಂತರ್ ಕಾಲೇಜು ಮಟ್ಟದ ಶಾರದಾ ಮಹೋತ್ಸವ ಸಾಂಸ್ಕೃತಿಕ ಸ್ಪರ್ಧೆಯು ದಿನಾಂಕ 09-09-2023 ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಸಿದ್ಧ ಹರಿದಾಸರು ಮತ್ತು ನ್ಯಾಯವಾದಿಗಳಾದ ಶ್ರೀ ಕಲಾರತ್ನ ಶಂನಾಡಿಗ ಕುಂಬ್ಳೆ “ಶಿಕ್ಷಣದ ಗುರಿ ಕೇವಲ ಅಂಕಗಳಿಕೆ ಮತ್ತು ಉದ್ಯೋಗ ಸಂಪಾದನೆಗೆ ಮಾತ್ರ ಸೀಮಿತವಾಗಬಾರದು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ನಮ್ಮ ಪರಂಪರಾಗತ ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆಯೂ ಅರಿವು ಹೊಂದಿರಬೇಕು. ಆಗ ಮಾತ್ರ ವ್ಯಕ್ತಿತ್ವ ಪರಿಪೂರ್ಣವಾಗಲು ಸಾಧ್ಯ.” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ಅಪರ್ಣಾ, ಅನಘಾ, ಸಾಕ್ಷಿ ಪ್ರಾರ್ಥಿಸಿ, ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಮಿತಾ ಪೈ ಸ್ವಾಗತಿಸಿದರು. ಪ್ರಾಂಶುಪಾಲ ಮಹಾಬಲೇಶ್ವರ ಭಟ್ ಸೊಡಂಕೂರು ಪ್ರಸ್ತಾವಿಕ ಮಾತುಗಳನ್ನಾಡಿ, ಉಪ ಪ್ರಾಂಶುಪಾಲ ಪ್ರಕಾಶ್ ನಾಯ್ಡ ಅತಿಥಿಗಳನ್ನು ಪರಿಚಯಿಸಿದರು. ಸಂಸ್ಕೃತ ವಿಭಾಗ ಮುಖ್ಯಸ್ಥ ರಮೇಶ ಆಚಾರ್ಯ ವಂದಿಸಿ, ಉಪನ್ಯಾಸಕಿ ಮಾಧವಿ.ಬಿ ಕಾರ್ಯಕ್ರಮ ನಿರ್ವಹಿಸಿದರು.
ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ವಿಶ್ವಸ್ಥ ಸುಧಾಕರ ರಾವ್ ಪೇಜಾವರ, ಹೊಸದಿಗಂತ ದೈನಿಕದ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ, ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲೆ ಮೀನಾ ಪಣಿಕರ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ 20ಕ್ಕೂ ಅಧಿಕ ಕಾಲೇಜಿನ 600 ವಿದ್ಯಾರ್ಥಿಗಳು ಭಾಗವಹಿಸಿದ್ದರು.