ಕಿನ್ನಿಗೋಳಿ : ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಗೌರವಪೂರ್ವಕವಾಗಿ ನೀಡಲಾಗುವ ‘ಕೊ. ಅ. ಉಡುಪ ಪ್ರಶಸ್ತಿ’ಯನ್ನು ಈ ಬಾರಿ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಇವರಿಗೆ ನೀಡಲಾಗುವುದು.
ಪ್ರತಿಭಾವಂತ ಕವಿಯಾಗಿ, ಸಾಹಿತಿಯಾಗಿ, ಪತ್ರಕರ್ತರಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಚಿದಂಬರ ಬೈಕಂಪಾಡಿ ಇವರು ಹಲವಾರು ವರ್ಷ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವರು. ಎಂಟು ಕೃತಿಗಳನ್ನು ರಚಿಸಿ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವರು. ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ಸಮಿತಿ ಕಾರ್ಯದರ್ಶಿಯಾಗಿ, ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ಸಲಹಾ ಸಮಿತಿಯ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಮಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವರು. ಕರ್ನಾಟಕ ಸಂಘದ ಕನ್ನಡ ಅಭಿವೃದ್ಧಿ ಸಮಿತಿಯ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿರುವರು ಬೈಕಂಪಾಡಿಯವರಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ವರದಿಗಾರ ಪ್ರಶಸ್ತಿ, ಅಖಿಲ ಭಾರತ ಆಕಾಶವಾಣಿ ವಾರ್ಷಿಕ ಪ್ರಶಸ್ತಿ, ಬನ್ನಂಜೆ ರಾಮಾಚಾರ್ಯ ಪತ್ರಿಕೋದ್ಯಮ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿಗಳು ಲಭಿಸಿದೆ. ‘ಕೊ. ಅ. ಉಡುವ ಪ್ರಶಸ್ತಿ’ಯನ್ನು ದಿನಾಂಕ 24 ಜುಲೈ 2026ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಜರಗಲಿರುವ ಸಮಾರಂಭದಲ್ಲಿ ರೂ.10,000/- ನಗದು, ಗೌರವ ಫಲಕ, ಪ್ರಶಸ್ತಿ ಪತ್ರದೊಂದಿಗೆ ಪ್ರದಾನ ಮಾಡಲಾಗುವುದು ಎಂದು ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.
